ಚಾಮರಾಜನಗರ:- ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಹಾಲಿನ ನಾಗರಾಜು ಅವರನ್ನು ಬಂಧಿಸಿರುವುದನ್ನು ಖಂಡಿಸಿ ಉಡಿಗಾಲ ಗ್ರಾಮ ಘಟಕದ ಪದಾಧಿಕಾರಿಗಳು ರಸ್ತೆ ನಡೆಸಿ ಪ್ರತಿಭಟನೆ ನಡೆಸಿದರು. ತಾಲೂಕಿನ ಉಡಿಗಾಲ ಗ್ರಾಮದಲ್ಲಿ ಚಾಮರಾಜನಗರ- ಗುಂಡ್ಲುಪೇಟೆ ಮುಖ್ಯರಸ್ತೆಯನ್ನು ತಡೆದು ಕೆಲಕಾಲ ಧರಣಿ ನಡೆಸಿದ ರೈತ ಮುಖಂಡರು ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಘಟಕದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ನಗರಕ್ಕೆ ಸಿಎಂ ಸಿದ್ದರಾಮಯ್ಯ ಆಗಮನದ ಹಿನ್ನೆಲೆಯಲ್ಲಿ, ಸಿಎಂ ವಿರುದ್ಧ ಯಾವುದೇ ಪ್ರತಿಭಟನೆಗಳನ್ನು ನಡೆಸಬಾರದು ಎಂದು ಮುನ್ನೆಚ್ಚರಿಕಾ ಕ್ರಮವಾಗಿ ನಮ್ಮ ಸಂಘದ ತಾಲೂಕು ಅಧ್ಯಕ್ಷರಾದ ಹಾಲಿನ ನಾಗರಾಜು ಅವರನ್ನು ಇಂದು ಮುಂಜಾನೆ ನಾಲ್ಕು ಗಂಟೆಯ ವೇಳೆಯಲ್ಲಿ ಪೊಲೀಸರು ಬಂಧಿಸಿರುವುದು ಖಂಡನೀಯ ಎಂದು ಅಸಮಾಧಾನ ಹೊರಹಾಕಿದರು.
ಸಿಎಂ ಅವರು ಬರ ಪರಿಹಾರ ಕೊಟ್ಟಿಲ್ಲ. ೧೦ ಗಂಟೆ ವಿದ್ಯುತ್ ನೀಡುತ್ತೇವೆ ಎಂದು ಹೇಳಿ ಈಗ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ. ಕಬ್ಬಿನ ಬಾಕಿ ಹಣವನ್ನು ನೀಡಿಲ್ಲ. ಅದರ ಹಣ ಜಿಲ್ಲೆಗೆ ೯.೫ ಕೋಟಿ ರೂ. ಬರಬೇಕು. ಅದನ್ನು ಕೇಳಲು ಹೋದರೆ ರೈತರನ್ನು ಬಂಧಿಸುವುದು ಎಷ್ಟರ ಮಟ್ಟಿಗೆ ಸರಿ. ಇದೇ ರೀತಿ ಹೋದರೆ,
ಮುಂದಿನ ದಿನಗಳಲ್ಲಿ ಜನಪ್ರತಿನಿಧಿಗಳು ಎಲ್ಲೇ ಬಂದರೂ ಅವರ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳಾದ ಸಿದ್ದೇಶ್, ರಾಜು, ಅಭಿಷೇಕ್, ಲೋಕೇಶ್, ಕೀರ್ತಿ, ಶ್ರೀಕಂಠಸ್ವಾಮಿ, ಪ್ರದೀಪ್, ಚೇತನ್, ನವೀನ್, ಶಿವು ಸೇರಿದಂತೆ ಇತರರು ಭಾಗವಹಿಸಿದ್ದರು.