ಬೆಂಗಳೂರು:- ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಅಬ್ಬರಿಸೋ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈರುತ್ಯ ಮುಂಗಾರು ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಕರಾವಳಿ ಭಾಗದಲ್ಲಿ ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ದಿನ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಸುತ್ತಮುತ್ತಲೂ ಮಧ್ಯಮ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಕೋಲಾರ, ವಿಜಯನಗರದ ಒಂದೆರಡು ಕಡಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ಕೊಪ್ಪಳ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರಿನಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಸಾಧಾರಣದೊಂದಿಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ.