ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಯೋಗ್ಯ ಅಭ್ಯರ್ಥಿಗಳನ್ನು ಅಳೆದು, ತೂಗಿ ಆಯ್ಕೆ ಮಾಡಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ‘ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದು, ವರಿಷ್ಠರೊಂದಿಗೆ ಚರ್ಚಿಸಲಾಗಿದೆ.
ರಾಜ್ಯದಲ್ಲಿನ ಎಲ್ಲ ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕೆನ್ನುವುದು ನಮ್ಮ ಧ್ಯೇಯ. ಆ ನಿಟ್ಟಿನಲ್ಲಿ ಯೋಗ್ಯ ಅಭ್ಯರ್ಥಿಗಳನ್ನು ಅಳೆದು, ತೂಗಿ ಆಯ್ಕೆ ಮಾಡಬೇಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಟಿಕೆಟ್ ಆಕಾಂಕ್ಷಿಳ ಬೇಡಿಕೆ ಸಹ ಹೆಚ್ಚಾಗಿದೆ’ ಎಂದು ಹೇಳಿದರು.
ಹಾನಗಲ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಮಾತನಾಡಿದ ಅವರುಪದೇಪದೇ ಇಂತಹ ಘಟನೆಗಳು ಪ್ರದರ್ಶನವಾಗುತ್ತಿರುವುದು ಖೇದಕರ. ಪ್ರಕರಣಕ್ಕೆ ಸಂಬಂಧಿಸಿ ಹಾವೇರಿ ಎಸ್ಪಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಮಹಿಳೆಯರು ಆತಂಕ ಪಡಬೇಕಿಲ್ಲ’ ಎಂದರು. ಕೆಲವು ಕಿಡಿಗೇಡಿಗಳಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದ್ದು, ಅವರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಿದರೆ ಎಲ್ಲವೂ ಸರಿಯಾಗುತ್ತದೆ’ ಎಂದರು