ಬೆಂಗಳೂರು: ನವೆಂಬರ್ 9 ರಂದು ಅರಮನೆ ಮೈದಾನದಲ್ಲಿ ಸೇವಾದಳದ ಶತಮಾನೋತ್ಸವ (Seva Dal Centenary) ಹಾಗೂ ರಾಜ್ಯ ಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ (Saleem Ahmed) ಹೇಳಿದ್ದಾರೆ.
ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸೇವಾದಳದ ಅಧ್ಯಕ್ಷರಾದ ಲಾಲ್ ಜಿ ಧ್ವಜಾರೋಹಣ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಸಚಿವರು, ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಇದೇ ತಿಂಗಳ 28 ರಂದು ಸೇವಾದಳ 100 ವರ್ಷಗಳನ್ನು ಪೂರೈಸಲಿದ್ದು, ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲೂ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆ ಮೂಲಕ ಸೇವಾದಳದ ಇತಿಹಾಸದ ಬಗ್ಗೆ ದೇಶಕ್ಕೆ ಸಂದೇಶ ರವಾನಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಸೇವಾದಳದ 3 ಸಾವಿರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಸೇವಾದಳ ಯಾವ ರೀತಿ ಕೆಲಸ ಮಾಡಬೇಕು, ಲೋಕಸಭೆ ಚುನಾವಣೆ ಹಾಗೂ ಪಕ್ಷ ಸಂಘಟನೆ ಮಾಡಬೇಕು ಎಂದು ಈ ಕಾರ್ಯಕ್ರಮದಲ್ಲಿ ಚರ್ಚೆಯಾಗಲಿದೆ ಎಂದು ತಿಳಿಸಿದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಿಗೆ ಸಚಿವರುಗಳನ್ನು ನಿಯೋಜನೆ ಮಾಡಲಾಗಿದ್ದು, 75% ರಷ್ಟು ಸಚಿವರು ಜಿಲ್ಲೆಗಳಲ್ಲಿ ಸಭೆ ಮಾಡಿದ್ದಾರೆ. ಮುಂದಿನ ಒಂದು ವಾರದಲ್ಲಿ ಮಂತ್ರಿಗಳು ಹಾಗೂ ವೀಕ್ಷಕರು ಲೋಕಸಭೆ ಚುನಾವಣೆಯ ಸಂಭಾವ್ಯ ಅಭ್ಯರ್ಥಿ ಕುರಿತು ವರದಿ ಸಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ನಂತರ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಉಸ್ತುವಾರಿ ಸಚಿವರಾದ ರಣದೀಪ್ ಸಿಂಗ್ ಸುರ್ಜೆವಾಲ ಅವರು ಚರ್ಚೆ ಮಾಡಿ ನಮ್ಮ ಹೈಕಮಾಂಡ್ಗೆ ವರದಿ ಸಲ್ಲಿಸಲಿದ್ದಾರೆ ಎಂದರು