ಕೋಲಾರ : ಮುಂಬರಲಿರುವ ರಾಜ್ಯ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ.೩೦ರಷ್ಟು ಅನುದಾನ ಸೇರಿದಂತೆ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಭಾರತ ವಿಧ್ಯಾರ್ಥಿ ಫೆಡರೇಶನ್ (SFI) ಸಂಘಟನೆಯಿಂದ ತಹಶೀಲ್ದಾರ್ ಕಛೇರಿ ಮುಂದೆ ಪ್ರತಿಭಟನೆ ನೆಡೆಸಿ ಉಪ ತಹಶಿಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸುರೇಶ್ ಬಾಬು ಮಾತನಾಡಿ , ಶಿಕ್ಷಣ ಕ್ಷೇತ್ರವು ವಿಶಾಲವಾಗಿ ವ್ಯಾಪಿಸಿದ್ದು ದೇಶ, ವಿದೇಶಗಳಿಂದಲೂ ವಿದ್ಯಾರ್ಥಿಗಳು ಬಂದು ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಉನ್ನತ ಶಿಕ್ಷಣ ವಿದ್ಯಾಭ್ಯಾಸ ಮಾಡುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದರೆ ಗಣನೀಯವಾಗಿ ಸಾರ್ವಜನಿಕ ಶಿಕ್ಷಣ ಕ್ಷೇತ್ರ ಕುಂಟಿತಗೊಳ್ಳುತ್ತಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ಸರ್ಕಾರಗಳು ಸಾರ್ವಜನಿಕ ಶಿಕ್ಷಣವನ್ನು ಕಡೆಗಣಿಸುವುದರ ಪರಿಣಾಮವಾಗಿ ಇಂದು ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲಕ ಕಾರ್ಪೊರೇಟ್ ಕಡೆಗೆ ಸಾಗುತ್ತಿದೆ ಎಂದು ಆರೋಪಿಸಿದರು.