ಚಾಂಪಿಯನ್ಸ್ ಟ್ರೋಫಿ 2025 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಟೂರ್ನಿ ಆರಂಭಕ್ಕೆ ಕೇವಲ 20 ದಿನಗಳಷ್ಟೇ ಉಳಿದಿವೆ. 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಸ್ಟಾರ್ ಆಲ್ರೌಂಡರ್ ಮಿಚೆಲ್ ಮಾರ್ಷ್ ಬೆನ್ನು ನೋವಿನಿಂದ ಬಳಲುತ್ತಿದ್ದು, ಅವರನ್ನು ತಂಡದಿಂದ ಹೊರಗಿಡಲಾಗಿದೆ.
ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಈ ಸುದ್ದಿಯನ್ನು ದೃಢಪಡಿಸಿದ್ದು, ಮಾರ್ಷ್ ಅವರ ಪುನರ್ವಸತಿ ಪ್ರಕ್ರಿಯೆಯು ನಿರೀಕ್ಷಿತ ಫಲಿತಾಂಶಗಳನ್ನು ನೀಡಿಲ್ಲ, ಇದರಿಂದಾಗಿ ಅವರು ಪಂದ್ಯಾವಳಿಯಿಂದ ಹಿಂದೆ ಸರಿಯಬೇಕಾಯಿತು ಎಂದು ಹೇಳಿದೆ.
ಇದೀಗ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಅಲಭ್ಯರಾಗಿರುವ ಮಿಚೆಲ್ ಮಾರ್ಷ್ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಸಂಪೂರ್ಣ ಗುಣಮುಖರಾಗುವ ಸಾಧ್ಯತೆಯಿಲ್ಲ ಎಂದು ವೈದ್ಯಕೀಯ ವರದಿಗಳು ತಿಳಿಸಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿಯಲು ಮಾರ್ಷ್ ನಿರ್ಧರಿಸಿದ್ದಾರೆ.
ಇದಕ್ಕೂ ಮುನ್ನ ಚಾಂಪಿಯನ್ಸ್ ಟ್ರೋಫಿಗಾಗಿ ಪ್ರಕಟಿಸಲಾದ 15 ಸದಸ್ಯರ ಆಸ್ಟ್ರೇಲಿಯಾ ತಂಡದಲ್ಲಿ ಮಿಚೆಲ್ ಮಾರ್ಷ್ ಆಲ್ರೌಂಡರ್ ಆಗಿ ಸ್ಥಾನ ಪಡೆದಿದ್ದರು. ಆದರೀಗ ಅವರು ಹೊರಗುಳಿದಿರುವ ಕಾರಣ ಬದಲಿ ಆಲ್ರೌಂಡರ್ನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಕ್ರಿಕೆಟ್ ಆಸ್ಟ್ರೇಲಿಯಾ ಮುಂದಿದೆ.
ಅತ್ತ ಮತ್ತೋರ್ವ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ ಕೂಡ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೇ ಕಾರಣದಿಂದಾಗಿ ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಪರಿಗಣಿಸಿಲ್ಲ. ಒಂದು ವೇಳೆ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಗ್ರೀನ್ ಚೇತರಿಸಿಕೊಂಡರೆ, ಅವರಿಗೆ ಅವಕಾಶ ಸಿಗಬಹುದು. ಇಲ್ಲದಿದ್ದರೆ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ನಲ್ಲಿ ಮಿಂಚಿದ್ದ ಬ್ಯೂ ವೆಬ್ಸ್ಟರ್ ಅವರನ್ನು ಏಕದಿನ ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆಯಿದೆ.