ಇಡೀ ರಾಜ್ಯವೇ ಬೆಚ್ಚಿಬೀಳುವಂತಹ ವರದಿಯನ್ನು ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಪೋರ್ಟಲ್ ನೀಡಿದೆ. ಆರ್ ಸಿ ಎಚ್ ವರದಿ ಪ್ರಕಾರ ರಾಜ್ಯದಲ್ಲಿ 28,657 ಬಾಲ ಗರ್ಭಿಣಿಯರಿದ್ದು,ಅದರಲ್ಲಿಯೂ ಬೆಂಗಳೂರಲ್ಲೇ ಅತಿ ಹೆಚ್ಚು ಬಾಲ ಗರ್ಭಿಣಿಯರಿದ್ದಾರೆ ಎಂದು ಮಾಹಿತಿ ನೀಡಿದೆ.
ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಹೆಣ್ಣು ಮಕ್ಕಳ ರಕ್ಷಣೆಗಾಗಿ ವಿವಿಧ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ‘ಕೇಂದ್ರ ಕಾರ್ಯಪಡೆ’ ರಚನೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಇತ್ತೀಚೆಗೆ ತುಮಕೂರು ಜಿಲ್ಲೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಬಾಲ ಗರ್ಭಿಣಿ ಪತ್ತೆಯಾದ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಳ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಏಪ್ರಿಲ್ 15, 2024 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಸಮಾಜ ಕಲ್ಯಾಣ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ, ಬುಡಕಟ್ಟು ಕಲ್ಯಾಣ ಮತ್ತು ಗೃಹ ಇಲಾಖೆಗಳಿಗೆ ಪತ್ರ ಬರೆದು, ಈ ಬೆಳವಣಿಗೆಯನ್ನು ತಡೆಯಲು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಹಾಸ್ಟೆಲ್ಗಳಲ್ಲಿ ಕಟ್ಟುನಿಟ್ಟಿನ ಸಿಸಿಟಿವಿ ಕಣ್ಗಾವಲು ಇರಬೇಕು. ಪ್ರತಿ ತಿಂಗಳು ತಪಾಸಣೆ ನಡೆಸುವ ಮೂಲಕ ಹೆಣ್ಣುಮಕ್ಕಳ ಆರೋಗ್ಯದ ಮೇಲೆ ನಿಗಾ ಇಡಬೇಕು. ಟಾಸ್ಕ್ ಫೋರ್ಸ್ ಅಧಿಕಾರಿಗಳು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ದೀರ್ಘಕಾಲ ಗೈರುಹಾಜರಾದ ವಿದ್ಯಾರ್ಥಿಗಳ ಮೇಲೂ ನಿಗಾ ಇಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಹದಿಹರೆಯದ ಗರ್ಭಧಾರಣೆಯ ಪ್ರಕರಣಗಳನ್ನು ವರದಿ ಮಾಡಲು ಸರಳವಾದ ಕಾರ್ಯವಿಧಾನವನ್ನು ರೂಪಿಸಬೇಕು. ಗರ್ಭಧಾರಣೆಯನ್ನು ತಡೆಗಟ್ಟಲು ಮತ್ತು ಪ್ರಸ್ತುತ ಘಟನೆಗಳ ಬಗ್ಗೆ ಮಾಹಿತಿಯನ್ನು ದಾಖಲಿಸಲು ಹೊಸ ಕೇಂದ್ರೀಕೃತ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ.
ಇದರ ಜೊತೆಗೆ ಲೈಂಗಿಕ ಶಿಕ್ಷಣದ ಬಗ್ಗೆ ಪೋಷಕರು ಮಕ್ಕಳಿಗೆ ಸರಳ ಪದಗಳಲ್ಲಿ ತಿಳಿಯುವಂತೆ ಅರ್ಥ ಮಾಡಿಸಬೇಕು. ಹೆಣ್ಣುಮಕ್ಕಳು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಬೇಕಾದ ಕೌಶಲಗಳನ್ನು ಕಲಿಯುವುದು ಉತ್ತಮ. ಬಾಲ್ಯ ವಿವಾಹಗಳು ಮತ್ತು ಅನಿಷ್ಟ ಸಾಮಾಜಿಕ ಆಚರಣೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಶಾಲಾ ಹಂತದಲ್ಲಿ ದೈಹಿಕ ಬೆಳವಣಿಗೆಯ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಂತ ಮುಖ್ಯ ಎಂದು ಹೇಳಲಾಗುತ್ತಿದೆ.