ಬೆಂಗಳೂರು:- ಮೋದಿ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ ಎಂದು ಆರ್ ಅಶೋಕ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಚುನಾವಣಾ ನೀತಿ ಸಂಹಿತೆ ಇರುವುದರಿಂದ ಬರ ಪರಿಹಾರ ಬಿಡುಗಡೆ ವಿಳಂಬವಾಗಿತ್ತು. ಈಗ ಎಲ್ಲಾ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದರು.
ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕಿಂತ ಮೋದಿ ಸರ್ಕಾರ ಹೆಚ್ಚಿನ ಹಣ ನೀಡಿದೆ. ಆದರೆ, ಪರಿಹಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪದೇಪದೆ ಸುಳ್ಳು ಹೇಳುತ್ತಾರೆ. ಈ ವಿಚಾರ ಇಟ್ಟುಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡುವುದು ಸರಿಯಲ್ಲ ಎಂದು ಅಶೋಕ್ ಹೇಳಿದರು.
ಬರ ಪರಿಹಾರ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗದ ಜತೆ ಚರ್ಚಿಸಿ ಆ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು. ಅದರಂತೆ, ಇದೀಗ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ.
ಬರ ಪರಿಹಾರ ಬಿಡುಗಡೆ ವಿಚಾರ ಕರ್ನಾಟಕದಲ್ಲಿ ತೀವ್ರ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಪದೇ ಪದೆ ವಾಗ್ದಾಳಿ ನಡೆಸುತ್ತಿದ್ದರು. ರಾಜ್ಯದ ಯಾವೊಬ್ಬ ಸಂಸದ ಕೂಡ ರಾಜ್ಯಕ್ಕೆ ಸಿಗಬೇಕಾದ ಬರ ಪರಿಹಾರದ ವಿಚಾರದಲ್ಲಿ ಕೇಂದ್ರದಲ್ಲಿ ಮಾತನಾಡುತ್ತಿಲ್ಲ. ರಾಜ್ಯದ ಯಾವ ಸಂಸದರಿಗೂ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ನ ಬಹುತೇಕ ನಾಯಕರು ಟೀಕಾ ಪ್ರಹಾರವನ್ನೇ ನಡೆಸಿದ್ದರು.