ಬೆಂಗಳೂರು:- ರಾಜ್ಯದಲ್ಲಿ ಅನುಷ್ಠಾನವಾಗಿರುವ ನಾಲ್ಕು ಗ್ಯಾರಂಟಿಗಳ ಪ್ರಗತಿ ಹೇಗಿದೆ ಎಂಬ ಮಾಹಿತಿಯನ್ನು CM ಸಿದ್ದರಾಮಯ್ಯ ಅವರು ಹಂಚಿಕೊಂಡಿದ್ದಾರೆ.
ಕಳೆದ 6 ತಿಂಗಳ ಅವಧಿಯಲ್ಲಿ ಶಕ್ತಿ ಯೋಜನೆಯಡಿ ನಾಡಿನ ಮಹಿಳೆಯರು ನಿತ್ಯ ಸರಾಸರಿ 60 ಲಕ್ಷದಂತೆ ಒಟ್ಟು 97.2 ಕೋಟಿಗೂ ಅಧಿಕ ಬಾರಿ ಉಚಿತ ಪ್ರಯಾಣ ಬೆಳೆಸಿದ್ದಾರೆ. ಈವರೆಗೆ ಒಟ್ಟು ರೂ. 2,303 ಕೋಟಿ ಮೊತ್ತದ ಉಚಿತ ಟಿಕೆಟ್ ವಿತರಿಸಲಾಗಿದೆ. ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ
ಗೃಹಲಕ್ಷ್ಮಿ ಯೋಜನೆಯಡಿ ರೂ. 17,500 ಕೋಟಿ ಅನುದಾನ ಮೀಸಲಿಟ್ಟಿದ್ದು, ಈವರೆಗೆ ರೂ. 11,200 ಕೋಟಿ ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. 99.52 ಲಕ್ಷ ನೊಂದಾಯಿತ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮಿ ಹಣ ವರ್ಗಾವಣೆಯಾಗಿದೆ
ರಾಜ್ಯದ ಪ್ರತಿ ಕುಟುಂಬಕ್ಕೆ ಮಾಸಿಕ ಗರಿಷ್ಠ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಯಡಿ ನೋಂದಾಯಿತ 1.56 ಕೋಟಿ ಕುಟುಂಬಗಳಿಗೆ ಅನುಕೂಲವಾಗಿದೆ. ಕಳೆದ 3 ತಿಂಗಳ ಅವಧಿಯಲ್ಲಿ ಈ ಯೋಜನೆಗಾಗಿ ರೂ. 2,152 ಕೋಟಿ ಅನುದಾನ ಬಿಡುಗಡೆ ಮಾಡಿದೆ.
ಬಡ ಕುಟುಂಬಗಳ ಪ್ರತಿ ಫಲಾನುಭವಿಗೆ ಮಾಸಿಕ ತಲಾ 10 ಕೆ.ಜಿ ಅಕ್ಕಿ ನೀಡಲಾಗುತ್ತಿದ್ದು, ಅಕ್ಕಿಯ ಅಲಭ್ಯತೆಯ ಕಾರಣಕ್ಕಾಗಿ ತಲಾ ರೂ.170ರಂತೆ ಹಣದ ವರ್ಗಾವಣೆ ಮಾಡಲಾಗುತ್ತಿದೆ.
ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ರೂ.3,000 ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ರೂ. 1,500 ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆ ಜನವರಿಯಿಂದ ಜಾರಿಗೊಳಿಸಲಾಗುವುದು ಎಂದು ಸಿಎಂ ಎಕ್ಸ್ ಪೋಸ್ಟ್ ಮಾಡಿದ್ದಾರೆ.