2023-24ನೇ ಸಾಲಿನಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮಳೆಯಾಶ್ರಿತ ಕೃಷಿ ನೀತಿ, 2014ರನ್ವಯ ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನ ಮಾಡಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸಲು ನಿರ್ಧರಿಸಲಾಗಿದೆ.
ಸಮರ್ಪಕವಾಗಿ ಮಳೆ ನೀರಿನ ಸಂಗ್ರಹಣೆ ಮಾಡುವುದು. ಶೇಖರಣೆಯಾದ ನೀರನ್ನು ಉಪಯುಕ್ತವಾಗಿ ಬಳಕೆ ಮಾಡಿ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯ ಹೆಚ್ಚಿಸುವುದು. ಮಳೆ ನೀರನ್ನು ವ್ಯರ್ಥ ಮಾಡದೇ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ ಬೆಳೆಗಳ ಸಂದಿಗ್ದ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿರುತ್ತದೆ.
100 ಕೋಟಿ ರೂ ವೆಚ್ಚದಲ್ಲಿ ಕೋಲಾರ ಜಿಲ್ಲೆ ಸೇರಿದಂತೆ 24 ಜಿಲ್ಲೆಗಳ ವ್ಯಾಪ್ತಿಯ 106 ತಾಲೂಕುಗಳಲ್ಲಿ ಯೋಜನೆ ಅನುಷ್ಠಾನಕ್ಕೆ ನಿರ್ಧರಿಸಲಾಗಿದೆ. 106 ತಾಲೂಕುಗಳಲ್ಲಿ16,062 ಕೃಷಿ ಹೊಂಡ ನಿರ್ಮಾಣ ಗುರಿ ಹೊಂದಿದ್ದು, ಕ್ಷೇತ್ರ ಬದು ನಿರ್ಮಾಣ, ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ ಅಳವಡಿಕೆ.
ಕೃಷಿ ಹೊಂಡದಿಂದ ನೀರು ಎತ್ತಲು ಡೀಸೆಲ್ ಪಂಪ್ಸೆಟ್ ಪೂರೈಕೆ, ನೀರನ್ನು ಬೆಳೆಗೆ ಹಾಯಿಸಲು ತುಂತುರು ನೀರಾವರಿ ಘಟಕ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ಅಳವಡಿಕೆ ಸೇರಿದಂತೆ ಹಲವು ಘಟಕಗಳಿಗೆ ಹಣಕಾಸು ನೆರವು ನೀಡಲು ನಿರ್ಧರಿಸಲಾಗಿದೆ.
ಕೃಷಿ ಭಾಗ್ಯಯೋಜನೆಯ ಸವಲತ್ತು ಪಡೆಯಲು ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆದರೆ ಕೃಷಿ ಭಾಗ್ಯ ಯೋಜನೆಯಡಿ ಸವಲತ್ತು ಪಡೆದಿರುವ ರೈತರು ಹಾಗೂ ನರೇಗಾಯೋಜನೆಯಡಿ ಸವಲತ್ತು ಪಡೆದಿರುವ ರೈತರನ್ನು ಹೊರತುಪಡಿಸಿ ಉಳಿದ ಎಲ್ಲಾ ರೈತ ಬಾಂಧವರು ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳ ಕೃಷಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಯೋಜನೆಯ ಪೂರ್ಣ ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಬಹುದು