ಬೆಂಗಳೂರು:- ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಜೆಡಿಎಸ್ ಪಕ್ಷದ ಹೆಚ್ಡಿ ಕುಮಾರಸ್ವಾಮಿ ಪರ ಸುಮಲತಾ ಇನ್ನೂ ಪ್ರಚಾರದ ಅಖಾಡಕ್ಕಿಲ್ಲ. ಬಿಜೆಪಿಯ ರಾಜ್ಯ, ಕೇಂದ್ರ ನಾಯಕರು ಹೇಳಿದರೆ ಕುಮಾರಸ್ವಾಮಿ ಪರ ಪ್ರಚಾರ ಮಾಡುವುದಾಗಿ ಸುಮಲತಾ ಹೇಳಿದ್ದರು. ಆದರೆ ಈವರೆಗೆ ಪ್ರಚಾರ ಮಾಡದೆ ಮೌನವಾಗಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ್ ಪ್ರಚಾರಕ್ಕೆ ಮುಂದಾಗಿದ್ದಾರೆ.
ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ ನಡೆಸಲಿದ್ದಾರೆ. ಕಳೆದ ಚುನಾವಣೆಯಲ್ಲಿ ಯಶ್ ಜತೆ ಜೋಡೆತ್ತಿನಂತೆ ನಿಂತಿದ್ದ ದರ್ಶನ್ ಸುಮಲತಾ ಪರ ಬೆವರು ಸುರಿಸಿ ಮಂಡ್ಯದಲ್ಲಿ ಪ್ರಚಾರ ಮಾಡಿದ್ದರು. ಆದರೆ, ಈಗ ಸುಮಲತಾ ಬಿಜೆಪಿಯಲ್ಲಿದ್ದರೂ ದರ್ಶನ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೋಗುತ್ತಿರುವುದು ಸಾಕಷ್ಟು ಅಚ್ಚರಿ ಮತ್ತು ಚರ್ಚೆಗೆ ಗ್ರಾಸವಾಗಿದೆ.
ಇತ್ತೀಚೆಗಷ್ಟೇ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಖುದ್ದು ಸುಮಲತಾರ ಮನೆಗೆ ಹೋಗಿ ಬೆಂಬಲ ಕೋರಿದ್ದರು. ಇದಾದ ನಂತರ ಸುಮಲತಾ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ಪ್ರಚಾರ ಮಾಡುವ ನಿರೀಕ್ಷೆ ಇತ್ತು. ಆದರೆ ಅವರು ಮೌನವಾಗಿದ್ದಾರೆ.