ಮದ್ದೂರು:- ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರು ಸಂಸದರಾದರೆ ಕೇಂದ್ರದಲ್ಲಿ ಕೃಷಿ ಮಂತ್ರಿಯಾಗಲಿದ್ದು, ಆ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಯಾಗಲಿದೆ ಎಂದು ಚಾಮನಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಉಸ್ತುವಾರಿ ಎಚ್.ಕೆ.ನಂದೀಶ್ ಗೌಡ ಹೇಳಿದರು. ಮದ್ದೂರು ತಾಲೂಕಿನ ಚಾಮನಹಳ್ಳಿ, ಹುಳಗನಹಳ್ಳಿ ಹಾಗೂ ವಿವಿಧ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರ ಪರವಾಗಿ ಮತಯಾಚಿಸಿದ ನಂತರ ಮಾತನಾಡಿದರು.
ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಸಾಲ ಮನ್ನಾ ಮಾಡುವ ಮೂಲಕ ರಾಜ್ಯದಲ್ಲಿ ರೈತ ಪರವಾದ ಸರ್ಕಾರವನ್ನು ನಡೆಸಿದ್ದಾರೆ. ಸಾರಾಯಿ, ಲಾಟರಿ ನಿಷೇಧ ಮಾಡುವ ಮೂಲಕ ರಾಜ್ಯದ ಜನತೆಗೆ ನೆಮ್ಮದಿ ಕಲ್ಪಿಸಿದ್ದಾರೆ. ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್, ಭಾಗ್ಯಲಕ್ಷ್ಮಿ ಯೋಜನೆ, ಗ್ರಾಮ ವಾಸ್ತವ್ಯ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಕೊಟ್ಟ ಕೀರ್ತಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ.
ಆದ್ದರಿಂದ, ಈ ಬಾರಿಯ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಧಿಕ ಮತಗಳನ್ನು ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು. ಮನ್ಮುಲ್ ನಿರ್ದೇಶಕಿ ರೂಪ, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಶಿವದಾಸ್ ಸತೀಶ್, ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ವಾಮಿಗೌಡ, ಗ್ರಾಪಂ ಸದಸ್ಯೆ ನಮಿತಾಬಾಬು, ಮುಖಂಡರಾದ ರಾಕೇಶ್, ಶಿವಣ್ಣ, ಕಾಡಪ್ಪ, ಚಾಮನ ಹಳ್ಳಿ ರಾಮಯ್ಯ, ಇದ್ದರು.