ಬೆಂಗಳೂರು: ತಿರುಪತಿ ಲಡ್ಡು ಪ್ರಸಾದ ಕಲಬೆರಕೆಯಿಂದ ಕೂಡಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರ ರಾಷ್ಟ್ರಾದ್ಯಂತ ಸದ್ದು ಮಾಡಿದೆ. ಇದರ ಬೆನ್ನಲ್ಲೇ ಇದೀಗ, ಬೆಂಗಳೂರಿನ ವೈಯಾಲಿಕಾವಲ್ನಲ್ಲಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ.
ಹೌದು, ತಿರುಪತಿಯಲ್ಲಿ ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ ತಿಮ್ಮಪ್ಪನ ಸನ್ನಿದಿಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಇದರಿಂದ, ಬೆಟ್ಟದಿಂದ ಲಡ್ಡು ಪೂರೈಸುವ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಅಕ್ಟೋಬರ್ 12ರವರೆಗೆ ಬೆಂಗಳೂರಿನ ತಿರುಪತಿ ದೇವಸ್ಥಾನಕ್ಕೆ ಟಿಟಿಡಿ ಆಡಳಿತ ಮಂಡಳಿ ಲಡ್ಡುವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಳಸುವ ತುಪ್ಪ ಕಳಪೆ ಗುಣಮಟ್ಟದಿಂದ ಕೂಡಿದೆ. ಈ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಮಾಡಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕರ್ನಾಟಕದ ಅರ್ಚಕರು ತಿರುಪತಿ ಲಡ್ಡು ಪ್ರಸಾದವನ್ನು ಬಳಸದಂತೆ ನಿರ್ಧರಿಸಿದ್ದಾರೆ.