ಮಂಡ್ಯ :– ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದರೇ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜೈಲಿನಲ್ಲಿದ್ದ ರೌಡಿ ಕುಳ್ಳಾ ರಿಜ್ವಾನ್: ಕೋಕಾ ಕಾಯ್ದೆ ಅಡಿಯಲ್ಲಿ ಮತ್ತೆ ವಶಕ್ಕೆ ಪಡೆದ ಖಾಕಿ
ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗ ಮೃತ ಪಟ್ಟು ಮತ್ತಿಬ್ಬರಿಗೆ ತೀವ್ರವಾಗಿ ಗಾಯವಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮೂಲತಃ ಕುಣಿಗಲ್ (ಹಾಲಿ ಬೆಂಗಳೂರಿನ ಬಗಲಗುಂಟೆಯಲ್ಲಿ ವಾಸ) ಮೂಲದ ದರ್ಶನ್ (21), ತಾಯಿ ಕಲಾ (40) ಸ್ಥಳದಲ್ಲೇ ಮೃತಪಟ್ಟಿದ್ದು ಕಲಾ ಅವರ ಮಗಳು ಮೇಘ (23) ಹಾಗೂ ಅಳಿಯ ಮಂಜುನಾಥ್ ಅವರಿಗೆ ತೀವ್ರವಾಗಿ ಗಾಯಗಳಾಗಿ ಮದ್ದೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಆಷಾಡ ಶುಕ್ರವಾರದ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ ದೇವರ ದರ್ಶನ ಪಡೆದು ವಾಪಾಸ್ ಬೆಂಗಳೂರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಂಜುನಾಥ್ ಕಾರು ಚಾಲನೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಮದ್ದೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ವರದಿ : ಗಿರೀಶ್ ರಾಜ್ ಮಂಡ್ಯ