ಗೌರಿಬಿದನೂರು : ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿನ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಹಿತ ಕಾಪಾಡುವುದರಲ್ಲಿ ವಿಫಲವಾಗಿದ್ದು, ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತು ಸದಸ್ಯ ವೈ.ಎ.ನಾರಾಯಣಸ್ವಾಮಿ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಶಿಕ್ಷಕರೊಂದಿಗೆ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ, ಅವರ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಾ ಅವರು ಮಾತನಾಡಿದರು.
ಕಳೆದ 20 ವರ್ಷಗಳಿಂದಲೂ ಈ ಭಾಗದ ಶಿಕ್ಷಕರು, ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದೇನೆ. ಮುಂಬರುವ 2024 ರ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಅಭ್ಯರ್ಥಿಯಾಗಿ ಮತ್ತೊಮ್ಮೆ ಶಿಕ್ಷಕರ ಸೇವೆ ಮಾಡಲು ಬಯಸಿದ್ದೇನೆ. ಸತತ ಮೂರು ಬಾರಿ ವಿಧಾನಪರಿಷತ್ತು ಸದಸ್ಯನಾಗಿ ಕಾರ್ಯನಿರ್ವಹಿಸುವ ಮೂಲಕ ಶಿಕ್ಷಣ ಕ್ಷೇತ್ರದ ಒಳಿತಿಗಾಗಿ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಹಿತ ಕಾಪಾಡಲು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಎಲ್ಲ ಶಿಕ್ಷಕರ ಸಂಘದ ಪದಾಧಿಕಾರಿಗಳು ನಮ್ಮೊಂದಿಗೆ ಇದ್ದಾರೆ.
ಪ್ರಸ್ತುತ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರದಿಂದ ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಕರ ಒಳಿತಿಗಾಗಿ ಯಾವುದೇ ಪ್ರಯೋಜನವಾಗುತ್ತಿಲ್ಲ. 7 ನೇ ವೇತನ ಆಯೋಗದ ಜಾರಿಗೆ ತರುವ ವಿಚಾರವು ನೆನೆಗುದಿಗೆ ಬಿದ್ದಿದೆ. ಸರ್ಕಾರವು ಗ್ಯಾರಂಟಿಗಳ ಹಿಂದೆ ಬಿದ್ದು ಓಡುತ್ತಿದೆ. ಬರದ ನಡುವೆ ಸಂಕಷ್ಟದಲ್ಲಿರುವ ಜನರ ಸಮಸ್ಯೆಗಳಿಗೆ ಸ್ಪಂಧಿಸಲು ವಿಫಲವಾಗಿದೆ. ಕಾಂಗ್ರೆಸ್ ಶಾಸಕರು ಕ್ಷೇತ್ರಗಳಿಗೆ ಅನುದಾನ ಸಿಗದೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯವಾಗದೆ ಹೊಡೆದಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ನಾಲ್ಕೂವರೆ ವರ್ಷ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವ ಸೂಚನೆಗಳು ದೊರೆಯುತ್ತಿಲ್ಲ. ಸರ್ಕಾರವು ಶಾಲೆಗಳಲ್ಲಿ ಡಿ.ಗ್ರೂಪ್ ನೌಕರರು ಮತ್ತು ಸಹಾಯಕರನ್ನು ನೇಮಕ ಮಾಡುವ ಯೋಗ್ಯತೆಯಿಲ್ಲ. ಅನಾವಶ್ಯಕವಾಗಿ ಶಿಕ್ಷಕರ ಮೇಲೆ ಎಪ್ ಐ ಆರ್ ಮಾಡಿಸುವ ವಿಚಾರವು ತೀವ್ರ ಖಂಡನೀಯವಾಗಿದೆ ಎಂದು ಹೇಳಿದರು.