ಬೆಂಗಳೂರು :- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಲಿಂಗತ್ವ ಅಲ್ಪಸಂಖ್ಯಾತರಿಗೆ ಸಿಹಿಸುದ್ದಿ ನೀಡಿದೆ. ಗೃಹಲಕ್ಷ್ಮಿ ಯೋಜನೆ ವ್ಯಾಪ್ತಿಗೆ ಅವರು ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅರ್ಜಿ ಸಲ್ಲಿಸಲು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ವಿವಿಧ ದಾಖಲೆಗಳ ಮೂಲಕ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಾಗಲು ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಕೆ ಮಾಡಲು ಅನುಕೂಲವಾಗುವಂತೆ ಸೇವಾಸಿಂಧು ಪೋರ್ಟಲ್ನಲ್ಲಿ ಅಗತ್ಯ ಬದಲಾವಣೆ ಮಾಡಲಾಗಿದೆ.
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಯೋಜನೆಯಡಿ ಈಗ ಲಿಂಗತ್ವ ಅಲ್ಪಸಂಖ್ಯಾತರು ಸೌಲಭ್ಯ ಪಡೆಯಬಹುದಾಗಿದ್ದು, ಈ ಸಂಬಂಧ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್ಜೆಂಡರ್ ಪರ್ಸನ್ (NATIONAL PORTAL FOR TRANS GENDER PERSON) ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರ ಅನುಮೋದನೆ ನೀಡಿದೆ, ತಂತ್ರಾಂಶದಲ್ಲಿ ಈ ಕುರಿತು ಮಾರ್ಪಾಡು ಮಾಡಲಾಗಿದೆ.
ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ, ಪಾಸ್ಪೋರ್ಟ್ ಸೈಜ್ ಪೋಟೊ ಮತ್ತು ಆಧಾರ್ ಕಾರ್ಡ್ ಕಡ್ಡಾಯವಾಗಿ ನೀಡಬೇಕಾಗಿರುತ್ತದೆ.