ಚಿಕ್ಕಮಗಳೂರಿನ : ಕಾಫಿನಾಡ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ ಸೇರಿದಂತೆ ಕಾಫಿನಾಡು ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ಮಾ.15ರಿಂದ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ 3 ದಿನಗಳ ಕಾಲ ಉರುಸ್ ನಡೆಯಲಿದ್ದು, ಪ್ರವಾಸಿಗರಿಗೆ ಸಂಪೂರ್ಣ ನಿಷೇದ ಹೇರಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶಿಸಿದೆ.
ಇದೇ ಮಾರ್ಚ್ 15ರಿಂದ 17ರವರೆಗೆ 3 ದಿನಗಳ ಕಾಲ ಪಶ್ಚಿಮ ಘಟ್ಟಗಳ ತಪ್ಪಲು ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಮಾಣಿಕ್ಯಾಧಾರ, ಗಾಳಿಕೆರೆ ಸೇರಿ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಿದೆ. ಉರುಸ್ ಆಚರಣೆಗೆ ರಾಜ್ಯದ ನಾನಾ ಭಾಗಗಳಿಂದ ಮುಸ್ಲಿಂ ಬಾಂಧವರು ಪಾಲ್ಗೊಳ್ಳಲಿದ್ದಾರೆ. ಹೀಗಾಗ ಯಾವುದೇ ಅಹಿತಕರ ಘಟನೆ ನಡೆಯಬಾರದು, ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಬಾರದು ಎಂದು ಜಿಲ್ಲಾಡಳಿತ ಪ್ರವಾಸಿಗರಿಗೆ ಸಂಪೂರ್ಣ ನಿಷೇಧ ಹೇರಿದೆ. ಉರುಸ್ ಆಚರಣೆ ಹಿನ್ನೆಲೆ ಪೊಲೀಸ್ ಕೂಡ ಜಿಲ್ಲಾದ್ಯಂತ ಹದ್ದಿನ ಕಣ್ಣಿಟ್ಟಿದ್ದು, ಚಿಕ್ಕಮಗಳೂರು ನಗರ ಹಾಗೂ ದತ್ತಪೀಠದಲ್ಲಿ 800ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.