ಮೇಕೆದಾಟು ಯೋಜನೆ ವಿಚಾರವಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮೇಕೆಗಳನ್ನು ಹಿಡಿದು ಹೋರಾಟ ನಡೆಸಿದ್ದು, ಕಾಂಗ್ರೆಸ್ ಸರ್ಕಾರದ ಮೇಕೆದಾಟು ಪಾದಯಾತ್ರೆಗೆ ನಮ್ಮ ಬೆಂಬಲವಿಲ್ಲ ಎಂದು ಹೋರಾಟಗಾರರು ಕಿಡಿಕಾರಿದ್ದಾರೆ. ಇದೇ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಕಾಂಗ್ರೆಸ್ ಸರ್ಕಾರವಿದ್ದಾಗ ಯೋಜನೆಯನ್ನು ಜಾರಿ ಮಾಡಲಿಲ್ಲ ಯಾಕೆ? ಇದೀಗ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ ಇದಕ್ಕೆ ನಮ್ಮ ಬೆಂಬಲ ಇಲ್ಲ ಎಂದು ಹೇಳಿದರು. ಅಲ್ಲದೇ ಮೇಕೆದಾಟು ಯೋಜನೆ ಜಾರಿಗಾಗಿ 2 ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿದ್ದು, ಮುಂದಿನ ದಿನಗಳಲ್ಲೂ ಉಗ್ರ ಚಳುವಳಿ ನಡೆಸುತ್ತೇವೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

