ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್ ಪ್ರಸನ್ನ (H Prasanna) ಈ ಬಗ್ಗೆ ಸೂಚನೆ ನೀಡಿದ್ದು, ಪ್ರಾಧಿಕಾರವು ಪೂರಕ ದಾಖಲೆಗಳನ್ನು ಪರಿಗಣಿಸಿ ಅರ್ಜಿಗಳನ್ನು ದೃಢೀಕರಿಸಲಿದೆ ಎಂದಿದ್ದಾರೆ. ಅರ್ಜಿದಾರರು ತಮ್ಮ ಅರ್ಜಿ ಸ್ಥಿತಿಯನ್ನು ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ಪರಿಶೀಲಿಸಬಹುದು ಎಂದು ಅವರು ಹೇಳಿದ್ದಾರೆ.
ಈ ಮೇಲಿನ ಹುದ್ದೆಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಲೇಬೇಕು. ಸೆಪ್ಟೆಂಬರ್ 29ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಈ ಪರೀಕ್ಷೆಗೆ ತಪ್ಪದೇ ಹಾಜರಾಗಬೇಕೆಂದು ಸೂಚಿಸಲಾಗಿದೆ.
ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು, 2021ರ ಅನ್ವಯ, ಕನ್ನಡ ಭಾಷಾ ಪರೀಕ್ಷೆಯಲ್ಲಿ 150 ಅಂಕಗಳಿಗೆ ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಅಕ್ಟೋಬರ್ 27ರಂದು ಪತ್ರಿಕೆ-1 ಮತ್ತು ಪತ್ರಿಕೆ-2 ಇವುಗಳನ್ನು ಒಳಗೊಂಡ ಸ್ಪರ್ಧಾತ್ಮಕ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ವಿವರಿಸಿದ್ದಾರೆ.