ಅಹಮದಾಬಾದ್: ವಿಶ್ವಕಪ್ ಸೋಲಿನಿಂದ ನಿರಾಸೆಗೊಂಡಿರುವ ಟೀಂ ಇಂಡಿಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಯ ನೀಡಿದ್ದಾರೆ. ಆಸ್ಟ್ರೇಲಿಯಾ ತಂಡದ ಗೆಲುವಿಗೆ ಅಭಿನಂದನೆ ಸಲ್ಲಿಸಿರುವ ಮೋದಿ, ಟೀಂ ಇಂಡಿಯಾ ಆಟಗಾರರಿಗೆ ಅಭಯ ನೀಡಿದ್ದಾರೆ.
ಈ ಕುರಿತು ಸೋಶಿಯಲ್ ಮೀಡಿಯಾ ಎಕ್ಸ್ ನಲ್ಲಿ ಹೇಳಿಕೆ ನೀಡಿರುವ ಪ್ರಧಾನಿ ಮೋದಿ, ಆತ್ಮೀಯ ಟೀಂ ಇಂಡಿಯಾ, ಈ ವಿಶ್ವಕಪ್ ಟೂರ್ನಿ ಮೂಲಕ ನಿಮ್ಮ ಅಸಾಧಾರಣ ಪ್ರತಿಭೆ ಗಮನ ಸೆಳೆದಿದೆ. ಉತ್ಸಾಹದಿಂದಲೇ ನೀವು ಆಡಿದ್ದೀರಿ, ರಾಷ್ಟ್ರಕ್ಕೆ ಹೆಮ್ಮೆ ತಂದಿದ್ದೀರಿ. ನಾವು ಇಂದು ಮತ್ತು ಯಾವಾಗಲೂ ನಿಮ್ಮೊಂದಿಗೆ ಇರುತ್ತೇವೆ ಎಂದು ಅಭಯ ನೀಡಿದ್ದಾರೆ
ಇದೇ ವೇಳೆ ವಿಶ್ವಕಪ್ನಲ್ಲಿ ಅಮೋಘ ಜಯ ಸಾಧಿಸಿದ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಆಸ್ಟ್ರೇಲಿಯಾ ತಂಡವೂ ಶ್ಲಾಘನೀಯ ಪ್ರದರ್ಶನ ನೀಡಿದ್ದು, ಟ್ರಾವಿಸ್ ಹೆಡ್ ಅವರ ಇಂದಿನ ಆಟ ಗಮನಾರ್ಹವಾಗಿದೆ ಎಂದು ತಿಳಿಸಿದ್ದಾರೆ.
ಭಾನುವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್ಗಳಲ್ಲಿ 240 ರನ್ಗಳಿಗೆ ತನ್ನೆಲ್ಲಾ ವಿಕೆಟ್ಗಳನ್ನು ಕಳೆದುಕೊಂಡಿತು. ಈ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 43 ಓವರ್ಗಳಲ್ಲೇ 4 ವಿಕೆಟ್ ನಷ್ಟಕ್ಕೆ 241 ರನ್ ಗಳಿಸಿ ಗೆಲುವು ಸಾಧಿಸಿತು. ಈ ಮೂಲಕ 6ನೇ ಬಾರಿಗೆ ಏಕದಿನ ವಿಶ್ವಕಪ್ ಟೂರ್ನಿ ಟ್ರೋಫಿ ಗೆಲ್ಲುವ ಕನಸನ್ನು ನನಸು ಮಾಡಿಕೊಂಡಿತು.