ಮಂಗಳೂರು:-ನೂತನವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ವಿಜಯೇಂದ್ರ ಅವರಿಗೆ ನಳಿನ್ ಕುಮಾರ್ ಕಟೀಲ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಯುವ ಮೋರ್ಚಾ ಕಾರ್ಯ ವಿಸ್ತರಣೆ ಮಾಡಿದ ಅವರು ಅತ್ಯುತ್ತಮ ಸಂಘಟಕರು, ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಅವರು ನಮ್ಮ ಜತೆ ರಾಜ್ಯದಲ್ಲಿ ಪ್ರವಾಸ ಮಾಡಿದ ಅನುಭವ ಇರುವವರು. ಉತ್ತಮ ರೀತಿಯಲ್ಲಿ ಪಕ್ಷವನ್ನು ಸಂಘಟಿಸುವ ವಿಶ್ವಾಸವಿದೆ. ಲೋಕಸಭೆ ಚುನಾವಣೆಯಲ್ಲಿ ಎಲ್ಲ 28 ಸ್ಥಾನಗಳನ್ನು ಗೆಲ್ಲಿಸುವುದು ನಮ್ಮ ಗುರಿಯಾಗಿದೆ’ ಎಂದರು.
‘ಅಧ್ಯಕ್ಷನಾಗಿ ಆಯ್ಕೆಯಾದಾಗ ದಕ್ಷಿಣ ಕನ್ನಡ ಜಿಲ್ಲೆಯವನು ಪ್ರವಾಸ ಮಾಡಿ ಅನುಭವ ಇಲ್ಲ ಎಂಬ ಮಾತು ಇತ್ತು. ಇಡೀ ರಾಜ್ಯವನ್ನು 18 ಬಾರಿ ಸುತ್ತಿದ್ದೇನೆ. ಅನೇಕ ಚುನಾವಣೆಗಳು, ಉಪಚುನಾವಣೆಗಳನ್ನು ಗೆದ್ದಿದ್ದೇವೆ. ಆದರೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆಯಾಗಿದೆ. ಇಡೀ ರಾಜ್ಯದಲ್ಲಿ ಪ್ರವಾಸ ಮಾಡಿ, ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷ ಕಟ್ಟಿರುವ ಬಗ್ಗೆ ತೃಪ್ತಿಯಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಡಿ.ವಿ. ಸದಾನಂದ ಗೌಡರ ರಾಜಕೀಯ ನಿವೃತ್ತಿ ಘೋಷಣೆಯ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅವರ ಜೊತೆ ಮಾತುಕತೆ ಮಾಡುತ್ತೇವೆ’ ಎಂದರು.