ಬೆಂಗಳೂರು:- ಜಾತಿ ತಾರತಮ್ಯ ಆರೋಪಕ್ಕೆ ಸಂಬಂಧಿಸಿದಂತೆ ಗೂಳಿಹಟ್ಟಿ ಶೇಖರ್ ಆರೋಪದ ಬಗ್ಗೆ ಆರ್ಎಸ್ಎಸ್ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಆರ್ಎಸ್ಎಸ್ ದಕ್ಷಿಣ ಮಧ್ಯಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ, ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಆರ್ಎಸ್ಎಸ್ ಕಚೇರಿ ಬಗ್ಗೆ ಆಡಿಯೊ ಹೇಳಿಕೆಯಲ್ಲಿ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಚೇರಿ ಹಾಗೂ ಸ್ಮಾರಕದ ಕಟ್ಟಡಗಳಲ್ಲಿ ಎಲ್ಲರಿಗೂ ಮುಕ್ತ ಪ್ರವೇಶವಿದೆ ಎಂದು ತಿಳಿಸಿದ್ದಾರೆ.
ನಾಗ್ಪುರದ ಆರ್ಎಸ್ಎಸ್ ಕಚೇರಿ ಭೇಟಿಯ ಸಂದರ್ಭದಲ್ಲಿ ಉಂಟಾದ ಕಹಿ ಅನುಭವಕ್ಕೆ ಸಂಬಂಧಿಸಿದಂತೆ ಹೇಳಿಕೆಯನ್ನು ಆಡಿಯೊ ರೂಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದ ಗೂಳಿಹಟ್ಟಿ ಶೇಖರ್, ಜಾತಿ ಕಾರಣಕ್ಕೆ ಹೆಡಗೇವಾರ್ ವಸ್ತುಸಂಗ್ರಹಾಲಯದ ಪ್ರವೇಶ ನಿರಾಕರಿಸಲಾಗಿತ್ತು ಎಂದು ಆರೋಪಿಸಿದ್ದರು.
‘ನಾಗ್ಪುರದಲ್ಲಿ ಸಂಘದ ಕಾರ್ಯಾಲಯವನ್ನು ನೋಡಲು ಬಂದವರ ಹೆಸರನ್ನು ನೋಂದಾಯಿಸಿ, ಪ್ರವೇಶ ನೀಡುವ ವ್ಯವಸ್ಥೆಯೇ ಇಲ್ಲ. ಇದೊಂದು ನಿರಾಧಾರ ಹಾಗೂ ಹುರುಳಿಲ್ಲದ ಆರೋಪ. ಆರ್ಎಸ್ಎಸ್ ಕಚೇರಿ, ಸ್ಮಾರಕ ಕಟ್ಟಡಗಳಿಗೆ ಎಲ್ಲ ಜಾತಿ, ವರ್ಗದ ಸಾವಿರಾರು ಜನ ನಿತ್ಯ ಬಂದು ಹೋಗುತ್ತಲೇ ಇದ್ದಾರೆ. ಯಾರಿಗೂ ಪ್ರವೇಶ ನಿರಾಕರಣೆಯ ಪ್ರಶ್ನೆಯೇ ಬಂದಿಲ್ಲ’ ಎಂದು ತಿಪ್ಪೇಸ್ವಾಮಿ ಹೇಳಿದ್ದಾರೆ.