ಅಹಮದಾಬಾದ್: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ನಿರ್ಣಾಯಕ ಹಂತಕ್ಕೆ ತಲುಪಿದೆ. ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಲಿವೆ.
ಫೈನಲ್‌ನಲ್ಲಿ ಸೆಣಸುತ್ತಿವೆ. 2003ರಲ್ಲಿ ದಕ್ಷಿಣ ಆಫ್ರಿಕಾದ ಜೋಹನ್ಸ್‌ಬರ್ಗ್‌ನಲ್ಲಿ ಕೊನೆಯ ಬಾರಿ ಭಾರತ ಹಾಗೂ ಆಸೀಸ್ ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತ ತಂಡ ಸೋಲು ಅನುಭವಿಸಿ ರನ್ನರ್ ಅಪ್‌ಗೆ ತೃಪ್ತಿಪಟ್ಟುಕೊಂಡಿತ್ತು.
ಐಸಿಸಿ ಟೂರ್ನಿಯ ಫೈನಲ್‌ನಲ್ಲಿ ಉಭಯ ತಂಡಗಳು ಇದೀಗ ಮೂರನೇ ಬಾರಿ ಮುಖಾಮುಖಿಯಾಗುತ್ತಿವೆ. 2023ರ ಐಸಿಸಿ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ಗೆಲುವು ಪಡೆದಿತ್ತು. ಇನ್ನೂ ಟೀಮ್ ಇಂಡಿಯಾ ಐಸಿಸಿ ಟೂರ್ನಿಯ ಫೈನಲ್‌ನಲ್ಲಿ ಆಸೀಸ್ ವಿರುದ್ದ ಗೆದ್ದೇ ಇಲ್ಲ.
ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಇಲ್ಲಿಯವರೆಗೂ ಆಡಿದ ಎಲ್ಲಾ 10 ಪಂದ್ಯಗಳಲ್ಲಿ ಗೆಲುವು ಪಡೆದಿದೆ. ಅಜೇಯ ಓಟದೊಂದಿಗೆ ರೋಹಿತ್ ಶರ್ಮಾ ಪಡೆ ಪ್ರಶಸ್ತಿ ಸುತ್ತಿನ ಪಂದ್ಯಕ್ಕೆ ಪ್ರವೇಶಿಸಿದೆ. ಈ ಹಿನ್ನೆಲೆಯಲ್ಲಿ ಸಹಜವಾಗಿಯೇ ಟೀಮ್ ಇಂಡಿಯಾ ಫೈನಲ್‌ನಲ್ಲಿ ಗೆಲ್ಲುವ ವಿಶ್ವಾಸವನ್ನು ಹೊಂದಿದೆ. 1983 ಹಾಗೂ 2011ರ ಬಳಿಕ ಇದೀಗ ಭಾರತ ಮೂರನೇ ವಿಶ್ವಕಪ್ ಮುಡಿಗೇರಿಸಿಕೊಳ್ಳಲು ಎದುರು ನೋಡುತ್ತಿದೆ.
ಏಕದಿನ ವಿಶ್ವಕಪ್ ಇತಿಹಾಸದಲ್ಲಿಯೇ ಆಸ್ಟ್ರೇಲಿಯಾ ಅತ್ಯಂತ ಯಶಸ್ವಿ ತಂಡವಾಗಿದೆ. 1987, 1999, 2003, 2007 ಮತ್ತು 2015ರಲ್ಲಿ ಆಸ್ಟ್ರೇಲಿಯಾ ತಂಡ ಒಟ್ಟು 5 ಬಾರಿ ಏಕದಿನ ವಿಶ್ವಕಪ್ ಗೆದ್ದಿದೆ. 1975 ಮತ್ತು 1996ರ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಸೋತು ರನ್ನರ್ ಅಪ್‌ಗೆ ತೃಪ್ತಿಪಟ್ಟುಕೊಂಡಿತ್ತು.