ಬೆಂಗಳೂರು: ಕೋಮುವಾದಿ ಕಿರೀಟ ಧರಿಸಿಕೊಂಡ ದೇವೇಗೌಡ್ರು ಹತಾಶೆಯಲ್ಲಿದ್ದಾರೆ,ಅವರ ಮಾತು ನನಗೆ ಆಶೀರ್ವಾದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು,ನನ್ನ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಮಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.
ನಮ್ಮ ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು. ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟವನ್ನು ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ ನೊಂದು ಹತಾಶೆಯಿಂದ ಇಂತಹ ಹೇಳಿಕೆ ನೀಡಿರಬಹುದೆಂದು ಭಾವಿಸಿದ್ದೇನೆ. ತಾವು ಹೇಳಿದ್ದು ತಪ್ಪು ಎಂದು ಅವರಿಗೆ ಪ್ರಾಮಾಣಿಕವಾಗಿ ಅನಿಸಿದರೆ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬಹುದು” ಎಂದು ತಿಳಿಸಿದ್ದಾರೆ.
“ಯಾವ ರಾಜಕೀಯ ಪಕ್ಷ ಕೂಡಾ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. ‘ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ’ ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು ಸಂಗ ದೋಷದ ಫಲ” ಎಂದು ಕುಟುಕಿದ್ದಾರೆ