ಚನ್ನಪಟ್ಟಣ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಮಾ. 21ರಂದು ಚೆನ್ನೈನ ಆಸ್ಪತ್ರೆಯೊಂದರಲ್ಲಿ ನಡೆಸಲಾಗಿದ್ದ ಹೃದಯ ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಸೋಮವಾರದಂದು ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ತನ್ನ ತಂದೆಗೆ ನಡೆಸಲಾಗಿದ್ದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಇದು ನಿಜಕ್ಕೂ ನಮ್ಮ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ಖುಷಿಯ ವಿಚಾರ. ಡಾ. ಮಂಜುನಾಥ್ ಹಾಗೂ ಡಾ. ಸತೀಶ್ ಸಾಯಿ ಅವರ ನೇತೃತ್ವದಲ್ಲಿ ಆಪರೇಷನ್ ನಡೆದಿತ್ತು. ಅವರೀಗ ಗುಣಮುಖರಾಗುತ್ತಿದ್ದಾರೆ. ಸೋಮವಾರದಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದ ಕುಮಾರಸ್ವಾಮಿ ಇತ್ತೀಚೆಗೆ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದ್ದರು. ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲಿ ತಂದೆ ಹೆಚ್ಡಿ ದೇವೇಗೌಡ ಹಾಗೂ ತಾಯಿ ಚೆನ್ನಮ್ಮ ಅವರಿಂದ ಆಶೀರ್ವಾದ ಪಡೆದ ಕುಮಾರಸ್ವಾಮಿ ನಂತರ ವಿಮಾನ ನಿಲ್ದಾಣಕ್ಕೆ ತೆರಳಿದ್ದರು.
ಬಳಿಕ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದ ಈ ಕುರಿತಾಗಿ ನಿಖಿಲ್ ಕುಮಾರಸ್ವಾಮಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಮಾ.21 ರಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು ಎಂದು ಮಾಹಿತಿ ನೀಡಿದ್ದರು.