ನವದೆಹಲಿ:- ಯಾವುದೇ ಕಾರಣಕ್ಕೂ ನಿಖಿಲ್ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ನಿಖಿಲ್ ಕುಮಾರಸ್ವಾಮಿ ಅವರು ಈ ಬಾರಿ ಜನರು ಚುನಾವಣೆಗೆ ನಿಲ್ಲಿ ಎಂದು ಹೇಳುತ್ತಿದ್ದಾರೆ. ಮಂಡ್ಯ ಕ್ಷೇತ್ರದಿಂದಲೇ ಕಣಕ್ಕೆ ಇಳಿಯಲಿ ಎಂದು ಬಯಸುತ್ತಿದ್ದಾರೆ. ಎರಡು ಬಾರಿ ಅವರು ಸೋತಿದ್ದಾರೆ. ಹೀಗಾಗಿ ಜನರ ಅನುಕಂಪವೂ ಇದೆ. ಆದರೆ, ಅವರಿಗೆ ಸ್ಪರ್ಧೆ ಮಾಡುವ ಉದ್ದೇಶವಿಲ್ಲ ಎಂದು ತಿಳಿಸಿದರು.
ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ. ಯಾವ ಯಾವ ಕ್ಷೇತ್ರದಲ್ಲಿ ಯಾರು ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕುಳಿತು ಅಂತಿಮಗೊಳಿಸುತ್ತೇವೆ. ಆ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಒಂದು ಕ್ಷೇತ್ರ ಹೆಚ್ಚೂ ಕಡಿಮೆ ಆಗಬಹುದು ಅಷ್ಟೇ. ಅದರಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ. ಮುಖ್ಯವಾಗಿ ಪರಸ್ಪರ ವಿಶ್ವಾಸ ಬೇಕು ಅಷ್ಟೇ, ಅದನ್ನು ನಾವು ಉಳಿಸಿಕೊಳ್ಳಬೇಕು. ಅದಕ್ಕೆ ಏನೆಲ್ಲ ಮಾಡಬೇಕೋ ಅದನ್ನು ಮಾಡುತ್ತೇನೆ. ಜನವರಿ ಅಂತ್ಯದ ಒಳಗೆ ನಾವು ಎಲ್ಲ ನಿರ್ಧಾರ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ನೀವು ಎಷ್ಟು ಕ್ಷೇತ್ರ ಕೇಳುತ್ತಿದ್ದೀರಿ? ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಚ್.ಡಿ. ಕುಮಾರಸ್ವಾಮಿ, ನಾವು ಎಷ್ಟು ಗೆಲ್ಲುತ್ತೇವೆ ಎನ್ನುವ ಕಡೆಯಷ್ಟೇ ಕೇಳುತ್ತೇವೆ. ನಾವು ಎಲ್ಲೆಲ್ಲಿ ಗೆಲ್ಲುತ್ತೇವೆ ಅಂತ ನಮ್ಮ ಬಳಿ ರಿಪೋರ್ಟ್ ಇದೆ. ಆ ರಿಪೋರ್ಟ್ ಪ್ರಕಾರ ನಾವು ಕೆಲಸ ಮಾಡುತ್ತೇವೆ. ಇಲ್ಲಿ ಸೀಟ್ ಹಂಚಿಕೆ ಒಂದೇ ಪ್ರಮುಖ ಅಲ್ಲ. ನಾವು ಪರಸ್ಪರ ವಿಶ್ವಾಸ, ನಂಬಿಕೆಯಿಂದ ಕೆಲಸ ಮಾಡುತ್ತೇವೆ. ಮೂರನೇ ಅವಧಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ನಾವೆಲ್ಲ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.